ನರೇಗಲ್ಲ, ಏ.14: ಪಟ್ಟಣದ ಶ್ರೀ ಅನ್ನದಾನೇಶ್ವರ ಪದವಿ ಕಾಲೇಜಿನಲ್ಲಿ ಬಿ.ಎ. ಎರಡನೇ ಸೆಮಿಸ್ಟರ್‌ನಲ್ಲಿ ಅಧ್ಯಯನ ಮಾಡುತ್ತಿರುವ ಕಾವ್ಯಾ ಶಿವಕುಮಾರ ಅಬ್ಬಿಗೇರಿ ಅವರು ಕರ್ನಾಟಕ ವಿಶ್ವವಿದ್ಯಾಲಯದ ಖೋ-ಖೋ ತಂಡಕ್ಕೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಎಸ್.ಜಿ. ಕೇಶಣ್ಣವರ ತಿಳಿಸಿದ್ದಾರೆ.
ಇತ್ತೀಚೆಗೆ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಖೋ-ಖೋ ಟೂರ್ನಿಯಲ್ಲಿ ಕಾವ್ಯಾ ಅವರು ಕರ್ನಾಟಕ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿ ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ. ಕಾವ್ಯಾ ಅಬ್ಬಿಗೇರಿಯ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಶ್ರೀ ಮುಪ್ಪಿನ ಬಸವಲಿಂಗ ಸ್ವಾಮೀಜಿ, ಪ್ರಧಾನ ಕಾರ್ಯದರ್ಶಿ ರವೀಂದ್ರನಾಥ ದೊಡ್ಡಮೇಟಿ, ಆಡಳಿತಾಧಿಕಾರಿ ಡಾ. ಜಿ.ಕೆ. ಕಾಳೆ, ಆಡಳಿತ ಮಂಡಳಿಯ ಚೇರ್ಮನ್ ಡಾ. ಎಸ್.ಎ. ಪಾಟೀಲ ಹಾಗೂ ಸದಸ್ಯರು ಶುಭಾಶಯಗಳನ್ನು ತಿಳಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
